ಉಡುಪಿ : ಮುಂಬರಲಿರುವ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಬಿಜೆಪಿ ಉಡುಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.
ಈ ಚುನಾವಣೆಯು ಪಕ್ಷಾಧಾರಿತ ಚುನಾವಣೆಯಾಗಿದ್ದು ಪಕ್ಷದ ವಿಚಾರಧಾರೆ ಇರುವವರನ್ನು ಗರಿಷ್ಠ ಸಂಖ್ಯೆಯಲ್ಲಿ ನೊಂದಾಯಿಸುವ ಜೊತೆಗೆ ನಕಲಿ ಮತದಾರರ ಸೇರ್ಪಡೆಯಾಗದಂತೆ ನಿಗಾ ವಹಿಸಬೇಕು. 3 ವರ್ಷದ ಪದವಿ ಪಡೆದು ನ.1ರಂದು 3 ವರ್ಷ ಪೂರೈಸುವ ಪದವೀಧರರು ಪದವೀಧರ ಕ್ಷೇತ್ರಕ್ಕೆ ಮತ್ತು ಕಳೆದ 6 ವರ್ಷಗಳಲ್ಲಿ ಕನಿಷ್ಠ 3 ವರ್ಷ ನಿರಂತರ 8ನೇ ತರಗತಿ ಮೇಲ್ಪಟ್ಟ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಶಿಕ್ಷಕರು ಶಿಕ್ಷಕರ ಕ್ಷೇತ್ರಕ್ಕೆ ಹಾಗೂ ಈ ನಿಗದಿತ ಅರ್ಹತೆ ಹೊಂದಿರುವವರು ಎರಡೂ ಕ್ಷೇತ್ರಗಳ ಮತದಾರರಾಗಿ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ಅವರು ತಿಳಿಸಿದರು.
ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೆ ನ.6 ಕೊನೆಯ ದಿನವಾಗಿದ್ದು, ಜವಾಬ್ದಾರಿ ಹೊಂದಿರುವ ತಂಡದ ಜೊತೆಗೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಚುನಾವಣೆಯ ಪೂರ್ಣ ಪ್ರಮಾಣದ ಗೆಲುವಿಗೆ ಸಂಘಟಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಈ ಹಿಂದಿನ ಚುನಾವಣೆಗಳ ವಿಶ್ಲೇಷಣೆ ಸಹಿತ ಪ್ರಾಸ್ತಾವಿಕವಾಗಿ ಮಾತನಾಡಿ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಬಾರಿ ಗೆಲುವು ಸಾಧಿಸಿರುವ ಇತಿಹಾಸವಿದೆ. ಈ ನಿಟ್ಟಿನಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತೀ ಮಂಡಲವಾರು ಮತದಾರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಕೈಜೋಡಿಸಬೇಕು ಎಂದರು. ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಚುನಾವಣೆಯ ಯಲ್ಲಿ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಕೈಜೋಡಿಸಬೇಕು ಎಂದರು.
ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಚುನಾವಣೆಯ ಪರ್ವಕಾಲದಲ್ಲಿರುವ ಈ ಸನ್ನಿವೇಶದಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಕ್ಷದ ಗೆಲುವಿನ ಔಚಿತ್ಯವನ್ನು ಅರ್ಥೈಸಿಕೊಂಡು ಅಭ್ಯರ್ಥಿಗಳ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ವಿ.ಸುನೀಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ಲಾಲಾಜಿ ಆರ್. ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು